ರಾಜ್ಯದ ರಾಜಕೀಯ ವಲಯದಲ್ಲಿ ಭಾರಿ ಕೋಲಾಹಲ ಸೃಷ್ಟಿಸಿದ್ದ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಬುಧವಾರ ಮೈಸೂರಿನಲ್ಲಿರುವ ಲೋಕಾಯುಕ್ತ ಕಚೇರಿಗೆ ಆಗಮಿಸಿದ್ದು, ವಿಚಾರಣೆ ಎದುರಿಸುತ್ತಿದ್ದಾರೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಎ1 ಆರೋಪಿಯಾಗಿದ್ದು, ಒಟ್ಟು ನಾಲ್ವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು.
ಮುಡಾದಲ್ಲಿ 50-50 ಅನುಪಾತದಡಿ ನಿವೇಶನ ಹಂಚಿಕೆಯಲ್ಲಿ ಬಹುಕೋಟಿ ಹಗರಣ ವಿಚಾರ ಸಂಬಂಧ ಸಿಎಂ ಸಿದ್ದರಾಮಯ್ಯ ಸೇರಿದಂತೆ ನಾಲ್ವರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿತ್ತು, ನಗರದ ದಿವಾನ್ಸ್ ರಸ್ತೆಯಲ್ಲಿರುವ ಲೋಕಾಯುಕ್ತ ಕಚೇರಿಗೆ ಆಗಮಿಸಿ ವಿಚಾರಣೆಗೆ ಹಾಜರಾದರು.
ಬುಧವಾರ ಬೆಳಿಗ್ಗೆ 10 ಗಂಟೆಗೆ ಲೋಕಾಯುಕ್ತ ಕಚೇರಿಗೆ ಆಗಮಿಸುವಂತೆ ಲೋಕಾಯುಕ್ತ ಅಧಿಕಾರಿಗಳು ನೋಟೀಸ್ ನೀಡಿದ್ದರು. ಸಿಎಂ ಸಿದ್ದರಾಮಯ್ಯ ವಿಚಾರಣೆಗೆ ಹಾಜರಾಗುವ ಹಿನ್ನೆಲೆಯಲ್ಲಿ ಮೈಸೂರು ಲೋಕಾಯುಕ್ತ ಕಚೇರಿ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಲೋಕಾಯುಕ್ತ ಕಚೇರಿ ಸುತ್ತಮುತ್ತ ಹಾಗೂ ಕಚೇರಿ ಸಂಪರ್ಕಿಸುವ ರಸ್ತೆಗಳಲ್ಲಿ ಬ್ಯಾರಿಕೇಡ್ ಅಳವಡಿಕೆ ಮಾಡಲಾಗಿತ್ತು. ಭದ್ರತೆಗಾಗಿ ಕೆಎಸ್ಆರ್ಪಿ ಹಾಗೂ ಸಿಎಆರ್ ತುಕಡಿಗಳ ಪೋಲಿಸರ ಬಳಕೆ ಮಾಡಿಕೊಳ್ಳಲಾಗಿತ್ತು. ಖುದ್ದು ಭದ್ರತೆ ಜವಾಬ್ದಾರಿಯನ್ನು ಮೈಸೂರು ನಗರ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ವಹಿಸಿಕೊಂಡಿದ್ದರು.
ಮೈಸೂರಿನ ಲೋಕಾಯುಕ್ತ ಕಚೇರಿಯ ಸನಿಹದಲ್ಲಿ ವಾಹನ ಸಂಚಾರ ಹಾಗು ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ವಿಧಿಸಲಾಗಿತ್ತು. ವಿಚಾರಣೆಗೆ ಬರುವಾಗ ಸರ್ಕಾರಿ ಕಾರನ್ನು ಬಿಟ್ಟು ಖಾಸಗಿ ಕಾರಿನಲ್ಲಿ ಲೋಕಾಯುಕ್ತ ಕಚೇರಿಗೆ ಸಿಎಂ ಸಿದ್ದರಾಮಯ್ಯ ತೆರಳಿದರು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದ ಅನ್ವಯ ವಿಚಾರಣೆ ನಡೆಸಲಾಗುತ್ತಿದೆ. ಲೋಕಾಯುಕ್ತ ಎಸ್ಪಿ ಟಿ ಜೆ ಉದೇಶ್ ನೇತೃತ್ವದಲ್ಲಿ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯರನ್ನು ವಿಚಾರಣೆ ಮಾಡಿದ್ದಾರೆ.
4 ಆರೋಪಿಗಳ ವಿಚಾರಣೆ
ಪ್ರಕರಣದಲ್ಲಿ ನಾಲ್ವರು ಆರೋಪಿಗಳ ಹೆಸರನ್ನು ಎಫ್ಐಆರ್ ನಲ್ಲಿ ದಾಖಲಾಗಿಸಲಾಗಿದೆ. ಎ1 ಸಿದ್ದರಾಮಯ್ಯ, ಎ2 ಸಿದ್ದರಾಮಯ್ಯ ಪತ್ನಿ ಪಾರ್ವತಿ, ಎ3 ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಮತ್ತು ಭೂ ಮಾಲೀಕ ದೇವರಾಜು ಎ4 ಆರೋಪಿಯಾಗಿದ್ದಾರೆ. ಈಗಾಗಲೇ ಎಲ್ಲಾ ಮೂರು ಆರೋಪಿಗಳ ವಿಚಾರಣೆ ನಡೆಸಲಾಗಿದ್ದು, ಇಂದು ಸಿಎಂ ಸಿದ್ದರಾಮಯ್ಯರನ್ನು ವಿಚಾರಣೆ ಮಾಡಲಾಗುತ್ತಿದೆ.